ಮಳೆಯಿಂದ ಯಾವುದೇ ಹಾನಿ ಸಂಭವಿಸದಂತೆ ಎಚ್ಚರಿಕೆವಹಿಸಲು ಡಿಸಿ ಸೂಚನೆ


ತುಮಕೂರು: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಳೆಯಿಂದ ಯಾವುದೇ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮಳೆ ಬಂದ ಸಂದರ್ಭಗಳಲ್ಲಿ ಮಳೆ ನೀರು ಸಂಗ್ರಹಣೆಯಾಗಿ ಸಮಸ್ಯೆ ಉಂಟಾಗುತ್ತಿರುವುದರಿಂದ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯುವಂತೆ ರಾಜಗಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಮಳೆಯಿಂದ ಯಾವುದೇ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯ ತಿಪಟೂರು ತಾಲ್ಲೂಕಿನ ಈಚನೂರು ಕೆರೆಗೆ ಹೇಮಾವತಿ ನೀರು ಬರುತ್ತಿದ್ದು, ಕೆರೆಯು ಶೇ.75ರಷ್ಟು ಭರ್ತಿಯಾಗಿದ್ದು, ಜನವರಿ ಮಾಹೆವರೆಗೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಾಲ್ಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಿಕೊಳ್ಳಬೇಕೆಂದು ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳ ಮೇಲೆ ಹೆಚ್ಚು ನಿಗಾವಹಿಸಿ, ಜಾತ್ರೆಗಳಿಗೆ ಕಡ್ಡಾಯವಾಗಿ ತಾಲ್ಲೂಕು ಸಮಿತಿಯಿಂದ ಅನುಮತಿ ಪಡೆದುಕೊಳ್ಳುವ ಬಗ್ಗೆ ಎಲ್ಲಾ ದೇವಸ್ಥಾನ ಮತ್ತು ಆಯೋಜಕರಿಗೆ ಸೂಚಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಆಶ್ರಯ ಯೋಜನೆಯಡಿ ಗುರುತಿಸಿರುವ ನಿವೇಶನಗಳಿಗೆ ಸಂಭಂದಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಶೀಘ್ರವಾಗಿ ಶಾಸಕರನ್ನೊಳಗೊಂಡ ಸಮಿತಿಯಿಂದ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ಸೂಚಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles