ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಗಡದವರಿಗೆ ಮೀಸಲಿಟ್ಟಿರುವ ಸ್ಮಶಾನ ಭೂಮಿಯನ್ನು ಸರ್ವೇ ಮಾಡಿ, ಸ್ಮಶಾನ ಭೂಮಿ ಒತ್ತುವರಿಯಾಗದಂತೆ ಅಗತ್ಯ ಕ್ರಮ ಕೈಗೊಂಡು ಅಭಿವೃದ್ಧಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸ್ಮಶಾನ ಭೂಮಿ ಮೀಸಲಿಡಲು ಈಗಾಗಲೇ ಸೂಚನೆ ನೀಡಲಾಗಿದ್ದು ಮುಂದಿನ ಸಭೆಯೊಳಗೆ ಸ್ಮಶಾನ ಭೂಮಿ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಕೊರಟಗೆರೆ ಬಸ್ ನಿಲ್ದಾಣದಲ್ಲಿ ನಡೆದ ದಲಿತ ಬಾಲಕ ಮಲ ಹೊತ್ತ ಘಟನೆಗೆ ಸಂಬಂಧಿಸಿದಂತೆ ದಲಿತ ಮುಖಂಡರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತಪ್ಪಿತಸ್ಥರು ಕೂಡ ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ವಿವಿಧ ನಿಗಮಗಳಲ್ಲಿ ಭೂ-ಒಡೆತನ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಭೂಮಿಯನ್ನು ಫಲಾನುಭವಿಗಳೇ ಅನುಭವಿಸುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕು ಮತ್ತು ಅಂತಹ ಭೂಮಿಯನ್ನು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ನಿಗಮಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿ ನಿಲಯಗಳ ಕುಂದು-ಕೊರತೆಗಳ ಬಗ್ಗೆ ವರದಿ ನೀಡಬೇಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುದಾನವನ್ನು ಬಾಕಿ ಉಳಿಸಿಕೊಳ್ಳದೆ ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, 2018 ರಿಂದ ದಾಖಲಾಗಿರುವ 33 ಪ್ರಕರಣಗಳ ಪೈಕಿ 7 ಫಲಾನುಭವಿಗಳಿಗೆ ನಿಯಮಾನುಸಾರವಾಗಿ ಉದ್ಯೋಗ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚುವರಿ ಶೌಚಾಲಯಗಳ ಬೇಡಿಕೆಯಿದ್ದು, ಶೌಚಾಲಯ ನಿರ್ಮಾಣಕ್ಕೆ ಅನುದಾನ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಹೆಚ್ಚಿನ ಪ್ರಕರಣಗಳು ದಾಖಲಾದರೂ ಸಹ ದೌರ್ಜನ್ಯ ತಡೆ ಕಾಯ್ದೆಯಡಿ ಸರಿಯಾದ ಸಾಕ್ಷಿಗಳಿಲ್ಲದಿರುವ ಮತ್ತು ಪ್ರಕರಣಗಳನ್ನು ಹಿಂಪಡೆಯುವುದರಿಂದ ನ್ಯಾಯಾಲಯದಲ್ಲಿ ಶಿಕ್ಷೆಯಾಗುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳಲ್ಲಿ ದೂರುದಾರರು ಬಲವಾಗಿ ಪ್ರಕರಣವನ್ನು ಮುನ್ನಡೆಸಬೇಕು. ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ಯಾವಾಗಲೂ ನೊಂದವರ ಪರವಾಗಿರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಹಾಗೂ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಣ್ಣ, ಎ. ರಂಜನ್, ಕೆ. ಗೋವಿಂದರಾಜು, ಕೆ.ಆರ್.ಶ್ರೀಧರ, ವಸಂತ್ ಕುಮಾರ್, ಡಾ: ಮುಕುಂದ ರಾಜು ಹಾಗೂ ನಾರಾಯಣಪ್ಪ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.