ತುಮಕೂರು | ಪ್ರಜಾಪ್ರಭುತ್ವ ದಿನಾಚರಣೆಗೆ ಗೈರಾದರೆ ಕ್ರಮ: ಡಿಸಿ ಎಚ್ಚರಿಕೆ

ತುಮಕೂರು: ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ನಿರ್ಮಿಸಲು ಉದ್ದೇಶಿರುವ 90 ಕಿ. ಮೀ ಉದ್ದದ ಮಾನವ ಸರಪಳಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಮಾನವ ಸರಪಳಿಯಲ್ಲಿ ಪಾಲ್ಗೊಳ್ಳದ ಅಧಿಕಾರಿ ಸಿಬ್ಬಂದಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ರಾಜ್ಯಾದಾತ್ಯಂತ ಬೀದರ್‌ನಿಂದ ಚಾಮರಾಜನಗರದವರೆಗೆ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಮಾನವ ಸರಪಳಿಯನ್ನು ಏಕ ಕಾಲದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 90 ಕಿ.ಮೀ ಗಳ ಮಾನವ ಸರಪಳಿಯನ್ನು 1ಲಕ್ಷ ಜನರ ಪಾಲ್ಗೊಳ್ಳುವಿಕೆಯಿಂದ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ದಿನದಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಉತ್ತಮ ನಿರ್ವಹಣೆ ದೃಷ್ಟಿಯಿಂದ ಪ್ರತಿ 100 ಮೀಟರ್‌ಗೆ ಒಬ್ಬರಂತೆ ಸೆಕ್ಷನ್ ಅಧಿಕಾರಿ ಸೇರಿದಂತೆ ಒಟ್ಟು 900 ಅಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲದೆ ಪ್ರತಿ ಕಿ.ಮೀ. ಗೆ ಒಬ್ಬ ನೋಡೆಲ್ ಅಧಿಕಾರಿಯಂತೆ 90 ತಾಲ್ಲೂಕು ಮಟ್ಟದ ಅಧಿಕಾರಿ, ಪ್ರತಿ 5 ಕಿ.ಮೀ.ಗೆ ಒಬ್ಬರಂತೆ 18 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ.
ಶಿರಾ ಮತ್ತು ತುಮಕೂರು ತಾಲ್ಲೂಕಿನ ತಹಸೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ, ಸ್ಥಳೀಯವಾಗಿ ಆಯಾ ತಾಲ್ಲೂಕು ವ್ಯಾಪ್ತಿಯ ಜವಾಬ್ದಾರಿಯನ್ನು ವಹಿಸಲಾಗಿದೆ ಹಾಗೂ ಪ್ರತಿ 30 ಕಿ.ಮೀ.ಗೆ ಒಬ್ಬರಂತೆ 3 ಮಂದಿ ಉಪ ವಿಭಾಗಾಧಿಕಾರಿಗಳನ್ನು ನೇಮಿಸಲಾಗಿದೆ. ಈ ಮಾನವ ಸರಪಳಿ ಕಾರ್ಯಕ್ರಮಕ್ಕೆ 330 ಗ್ರಾಮ ಪಂಚಾಯ್ತಿಯ ಎಲ್ಲಾ ಸಾರ್ವಜನಿಕ ಬಂಧುಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕಲಾವಿದರಿಗೆ ಮಾಹಿತಿ ನೀಡಿ ಕಾರ್ಯಕ್ರಮದಲ್ಲಿ ಮುಕ್ತವಾಗಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಉಪನ್ಯಾಸಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಅವರು ಸೂಚಿಸಿರುವುದಲ್ಲದೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಆದೇಶಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles